ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್‌ ದಿಢೀರ್ ಭೇಟಿ;ಕರ್ತವ್ಯ ಲೋಪ: ದೇವನಹಳ್ಳಿ ತಹಶೀಲ್ದಾರ್‌ ಕಚೇರಿ ಅಭಿಲೇಖಾಲಯ ಅಧಿಕಾರಿ ಅಮಾನತು

ದೇವನಹಳ್ಳಿ: ಸಾರ್ವಜನಿಕರ ಕೆಲಸಗಳಲ್ಲಿ ವಿಳಂಬ ಧೋರಣೆ ಹಾಗೂ ಕಂದಾಯ ದಾಖಲೆಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವುದನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ದೇವನಹಳ್ಳಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದ ಉಪಮುಖ್ಯಮಂತ್ರಿಗಳು, ದಾಖಲೆಗಳ ಕೊಠಡಿಯಲ್ಲಿ (ರೆಕಾರ್ಡ್ ರೂಮ್) ದತ್ತಾಂಶ ಹಾಗೂ ಕಂದಾಯ ದಾಖಲೆಗಳ ನಿರ್ವಹಣೆಯಲ್ಲಿ ಗಂಭೀರ ಲೋಪವೆಸಗಿದ ಅಧಿಕಾರಿಯನ್ನು ಸ್ಥಳದಲ್ಲೇ ಅಮಾನತುಗೊಳಿಸಲು ಆದೇಶಿಸಿದರು.

ದಾಖಲೆಗಳ ಕೊಠಡಿ ಪರಿಶೀಲನೆ: ಅಧಿಕಾರಿ ಅಮಾನತಿಗೆ ಆದೇಶ:
ತಾಲೂಕು ಕಚೇರಿಯ ವಿವಿಧ ವಿಭಾಗಗಳಿಗೆ ಅನಿರೀಕ್ಷಿತವಾಗಿ ತೆರಳಿದ ಡಾ. ಜಿ. ಪರಮೇಶ್ವರ್, ಸಾರ್ವಜನಿಕರ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಖುದ್ದಾಗಿ ಪರಿಶೀಲಿಸಿದರು. ಈ ವೇಳೆ ರೆಕಾರ್ಡ್ ರೂಮ್‌ನಲ್ಲಿ ಕಂದಾಯ ದಾಖಲೆಗಳನ್ನು ಸಮರ್ಪಕವಾಗಿ ಇಡದಿರುವುದು ಹಾಗೂ ದತ್ತಾಂಶ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಎಸಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕರ್ತವ್ಯಲೋಪವೆಸಗಿದ ಸಂಬಂಧಪಟ್ಟ ಅಭಿಲೇಖಾಲಯ(ದಾಖಲೆ ಕೊಠಡಿ) ಸಿಬ್ಬಂದಿಯೊಬ್ಬರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

“ಕಂದಾಯ ದಾಖಲೆಗಳು ಜನಸಾಮಾನ್ಯರ ಆಸ್ತಿ ಮತ್ತು ಹಕ್ಕುಗಳ ಜೀವಾಳ. ಸ್ವಾತಂತ್ರ್ಯಪೂರ್ವದ ಮೂಲ ದಾಖಲೆಗಳೂ ಇಲ್ಲಿವೆ. ಒಂದು ದಾಖಲೆ ನಾಶವಾದರೂ ಬಡ ಕುಟುಂಬಗಳು ಬೀದಿಗೆ ಬೀಳುತ್ತವೆ. ದಾಖಲೆಗಳ ರಕ್ಷಣೆ ಹಾಗೂ ಡಿಜಿಟಲೀಕರಣಕ್ಕೆ ಮೊದಲ ಆದ್ಯತೆ ನೀಡಬೇಕು,” ಎಂದು ತಹಶೀಲ್ದಾರ್ ಹಾಗೂ ಭೂದಾಖಲೆಗಳ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಗೋಮಾಳ ಒತ್ತುವರಿ, ನಕಲಿ ದಾಖಲೆ ಸೃಷ್ಟಿಗೆ ಬೀಳಲಿದೆ ಬ್ರೇಕ್:
ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಭೂಮಿಯ ಮೌಲ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಕಲಿ ದಾಖಲೆ ಸೃಷ್ಟಿ, ಆಸ್ತಿ ವಂಚನೆ ಹಾಗೂ ಅಕ್ರಮ ಖಾತೆ ಬದಲಾವಣೆ ತಡೆಗೆ ತಂತ್ರಜ್ಞಾನ ಆಧಾರಿತ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಸ್ಪಷ್ಟಪಡಿಸಿದರು. ಬಿಲ್ಡರ್‌ಗಳು ಸೇರಿದಂತೆ ಪ್ರಭಾವಿಗಳು ಸರ್ಕಾರಿ ಗೋಮಾಳ ಜಮೀನುಗಳನ್ನು ಒತ್ತುವರಿ ಮಾಡಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುವುದು. ಇದಕ್ಕೆ ಸಾಥ್ ನೀಡುವ ಅಧಿಕಾರಿಗಳ ವಿರುದ್ಧವೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಉಪ ನೋಂದಣಾಧಿಕಾರಿ ಕಚೇರಿಗೆ ನೂತನ ಕಟ್ಟಡ:
ಸ್ಥಳಾಭಾವ ಎದುರಿಸುತ್ತಿರುವ ದೇವನಹಳ್ಳಿ ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಕಚೇರಿಗೆ ನೂತನ ಕಟ್ಟಡ ನಿರ್ಮಿಸಲು ಜಿಲ್ಲಾಧಿಕಾರಿಗಳು ಸೂಕ್ತ ಜಾಗ ಗುರುತಿಸಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ. ಕಚೇರಿ ಸೌಲಭ್ಯಗಳಿಗಿಂತ ಜನರ ಆಸ್ತಿ ನೋಂದಣಿ ಮೂಲ ದಾಖಲೆಗಳನ್ನು ಸುರಕ್ಷಿತವಾಗಿ ಸಂರಕ್ಷಿಸುವುದಕ್ಕೆ ಈ ಕಟ್ಟಡದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದರು.

ಬರ ಪರಿಹಾರ: ಪ್ರತಿ ಕ್ಷೇತ್ರಕ್ಕೆ 1 ಕೋಟಿ ಅನುದಾನ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಕುಡಿಯುವ ನೀರು ಹಾಗೂ ತುರ್ತು ಪರಿಹಾರ ಕಾರ್ಯಗಳಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ಬಿಡುಗಡೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 9 ಕೋಟಿ ಅನುದಾನ ಲಭ್ಯವಿದೆ. ರಾಜ್ಯದ 50 ಲಕ್ಷ ರೈತರಿಗೆ ಮೊದಲ ಕಂತಿನ ಬೆಳೆ ನಷ್ಟ ಪರಿಹಾರವಾಗಿ 1,250 ಕೋಟಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

Comments

Leave a Reply

Your email address will not be published. Required fields are marked *