Tag: Rain effect

  • ಮುಂಗಾರು ಮಳೆ ಆರಂಭಕ್ಕೆ ಕ್ಷಣಗಣನೆ, ಗುಡುಗು, ಮಿಂಚು ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ

    ಮುಂಗಾರು ಮಳೆ ಆರಂಭಕ್ಕೆ ಕ್ಷಣಗಣನೆ, ಗುಡುಗು, ಮಿಂಚು ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ

    ಮುಂಗಾರು ಆರಂಭದ ಮುನ್ಸೂಚನೆಯಾಗಿ ಕೇರಳದಾದ್ಯಂತ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ (Yellow Alert) ಘೋಷಿಸಿದೆ.

    ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಪ್ರವಾಹ ಅಥವಾ ನೀರು ನಿಲ್ಲುವ ಸಾಧ್ಯತೆಯಿರುವುದರಿಂದ ಜಾಗರೂಕರಾಗಿರಲು ಹೇಳಲಾಗಿದೆ. ಗುಡುಗು, ಮಿಂಚು ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ.

    ಭಾರತೀಯ ಹವಾಮಾನ ಇಲಾಖೆಯ (IMD) ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಮುಂಗಾರು ಮಾರುತಗಳು ಮೇ 26ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಮುಂಗಾರು ಜೂನ್ 1 ರಂದು ಕೇರಳಕ್ಕೆ ಆಗಮಿಸುವುದು ವಾಡಿಕೆ. ಆದರೆ ಈ ಬಾರಿ ಸುಮಾರು ಒಂದು ವಾರ ಮುಂಚಿತವಾಗಿಯೇ ಆಗಮಿಸುತ್ತಿದೆ.

    ಮುಂಗಾರು ಮಾರುತಗಳು ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಆಗ್ನೆಯ ಅರಬ್ಬಿ ಸಮುದ್ರದ ಭಾಗಗಳನ್ನು ಆವರಿಸಿಕೊಂಡಿವೆ. ಕೇರಳದತ್ತ ವೇಗವಾಗಿ ಮುನ್ನುಗ್ಗುತ್ತಿವೆ.

    ಪ್ರಸ್ತುತ ಕೇರಳದಾದ್ಯಂತ ವ್ಯಾಪಕವಾಗಿ ಗುಡುಗು ಸಹಿತ ಮಳೆಯಾಗುತ್ತಿದೆ. ಮುಂದಿನ 5 ದಿನಗಳ ಕಾಲ ಭಾರಿ ಮಳೆ (7 ರಿಂದ 11 ಸೆಂ.ಮೀ) ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( IMD ) ತಿಳಿಸಿದೆ. ಲಕ್ಷದ್ವೀಪ ಮತ್ತು ಕೇರಳದ ಕರಾವಳಿ ತೀರಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಕಡಲು ಆರ್ಭಟಿಸುತ್ತಿದೆ. ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

    ಮುಂಗಾರು ಬೇಗನೇ ಆರಂಭವಾಗುತ್ತಿದ್ದರೂ, ಈ ವರ್ಷ ‘ಎಲ್ ನಿನೋ’ (El Nino) ಪ್ರಭಾವದ ಸಾಧ್ಯತೆ ಇರುವುದರಿಂದ ದೇಶದಲ್ಲಿ ಒಟ್ಟಾರೆ ಮುಂಗಾರು ಮಳೆ ಸಾಮಾನ್ಯಕ್ಕಿಂತ ಕೊಂಚ ಕಡಿಮೆ (ದೀರ್ಘಾವಧಿ ಸರಾಸರಿಯ ಶೇ. 92 ರಿಂದ 94 ರಷ್ಟು) ಇರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

  • ಇಂದಿನಿಂದ ರಾಜ್ಯದಲ್ಲಿ ಮಳೆ, ಹಲವೆಡೆ Yellow ಅಲರ್ಟ್ ಘೋಷಣೆ

    ಇಂದಿನಿಂದ ರಾಜ್ಯದಲ್ಲಿ ಮಳೆ, ಹಲವೆಡೆ Yellow ಅಲರ್ಟ್ ಘೋಷಣೆ

    ಬೆಂಗಳೂರು: ರಾಜ್ಯದ ಹಲವೆಡೆ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ‘ಯೆಲ್ಲೋ ಅಲರ್ಟ್‌’ ನೀಡಿದೆ.

    ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಬೀದ‌ರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ.

    ಬೆಂಗಳೂರು ಮತ್ತು ಗ್ರಾಮಾಂತರದಲ್ಲಿ  ಮೋಡ ಕವಿದ ವಾತಾವರಣ ಇರಲಿದ್ದು, ಹಲವು ಪ್ರದೇಶಗಳಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ತಿಳಿಸಿದೆ.

    ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರದಲ್ಲಿ 3 ಸೆಂ.ಮೀ, ಕೊಪ್ಪದಲ್ಲಿ 1 ಸೆಂ.ಮೀ, ಭದ್ರಾವತಿ, ಶಿವಮೊಗ್ಗದಲ್ಲಿ ತಲಾ 1 ಸೆಂ.ಮೀ. ಮಳೆ ದಾಖಲಾಗಿದೆ.